ಶಿವಮೊಗ್ಗ : ಮಳೆಗಾಲದಲ್ಲಿ ಸಂಭವಿಸಬಹುದಾದ ಭೂಕುಸಿತ, ರಸ್ತೆ ಹಾನಿ ಹಾಗೂ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೆ ಜಲ್ಲಿ ಮತ್ತು ಬೃಹತ್ ಸರಕು ಸಾಗಾಣೆಯ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಆಗುಂಬೆ ಘಾಟಿ ರಸ್ತೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆಗಳ ಜನರಿಗೆ ಕರಾವಳಿ ಭಾಗದ ಮಣಿಪಾಲ್, ಉಡುಪಿ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದೆ. ಮಳೆಗಾಲದಲ್ಲಿ ಭೂಕುಸಿತ ಅಥವಾ ರಸ್ತೆ ಸಂಪರ್ಕ ಕಡಿತಗೊಂಡರೆ ತುರ್ತು ಆರೋಗ್ಯ ಸೇವೆಗಳಿಗೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ.
ಜಿಲ್ಲಾಡಳಿತದ ಆದೇಶದಂತೆ ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ತೆರಳುವ ಭಾರಿ ವಾಹನಗಳು ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ -ಉಡುಪಿ ಮಾರ್ಗ ಅಥವಾ ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವನ್ನು ಬಳಸಬೇಕು.
ಹಾಗೆಯೇ ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಮಾರ್ಗ ಅಥವಾ ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ-ತೀರ್ಥಹಳ್ಳಿ ರಸ್ತೆಯ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
ಮಳೆಗಾಲದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ತುರ್ತು ಸೇವೆಗಳ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.


