ಶಿವಮೊಗ್ಗ : ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಧುಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್‌ರೋಡ್‌ನಲ್ಲಿ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಕೊಲೆ ಪ್ರಕರಣ ಸಂಬಂಧ ಬಂಧಿತನಾಗಿದ್ದ ಮಧುವನ್ನು ಮಹಜರಿಗೆ ಕರೆದೊಯ್ಯುವ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಕೋಟೆ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಕೋಟೆ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಮೊದಲು ಆರೋಪಿಗೆ ಎಚ್ಚರಿಕೆ ನೀಡಿದ್ದಾರೆ. ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿ ವಾರ್ನಿಂಗ್ ನೀಡಿದರೂ ಮಧು ಹಲ್ಲೆ ಮುಂದುವರಿಸಿದ್ದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಗಾಯಗೊಂಡ ಆರೋಪಿ ಮಧು ಹಾಗೂ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಗಮನಾರ್ಹವಾಗಿ, ಎರಡು ದಿನಗಳ ಹಿಂದೆ ಶಿವಮೊಗ್ಗ ನಗರದ ಗಾಂಧಿ ಬಜಾರ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧು ಸೇರಿದಂತೆ ಐವರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದರು.
ಈಗ ಪೊಲೀಸ್ ಫೈರಿಂಗ್ ಪ್ರಕರಣ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


