ಹಾಸನ : ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ಮಧ್ಯರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಅತಿ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ (KA 51 AF 3044), ಸಕಲೇಶಪುರ ತಾಲ್ಲೂಕಿನ ಹೆಗ್ಗದೆ ಬಳಿ ತನ್ನ ಮುಂದೆ ಹೋಗುತ್ತಿದ್ದ ಲಾರಿಗೆ ಜೋರಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗದ ಭಾಗವು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಸೇರಿ ಒಟ್ಟು 40 ಪ್ರಯಾಣಿಕರಿದ್ದರು. ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಬಸ್ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಬಳಿಕ ಪೊಲೀಸರು ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


