ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 31-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ. ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳು ಸೇರಿದಂತೆ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.
ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ಬದಿಗಳಿಗೆ ಹೋಗದಂತೆ ಪಾಲಕರು ಖಚಿತಪಡಿಸಿಕೊಳ್ಳಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಕಚೇರಿಯಲ್ಲಿಯೇ ಇರುವಂತೆ ತಿಳಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವಂತೆ ಕೋರಲಾಗಿದೆ. ತಹಶೀಲ್ದಾರ್‌ಗಳು ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.
ತಾಲೂಕು ಮಟ್ಟದಲ್ಲಿ ರಕ್ಷಣಾ ಕೇಂದ್ರಗಳನ್ನು ತೆರೆದು ಅವುಗಳನ್ನು ಸಜ್ಜುಗೊಳಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತುರ್ತು ಸೇವೆಯು ಟೋಲ್ ಫ್ರೀ ಕಂಟ್ರೋಲ್ ರೂಮ್ ಸಂಖ್ಯೆ 1077 ಮತ್ತು ದೂರವಾಣಿ ಸಂಖ್ಯೆ 0824-2442590 ಮೂಲಕ 24x 7 ಲಭ್ಯವಿದೆ.ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.