ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಘಟನೆ ನಾಗಮಂಗಲದ ಬದರಿಕೊಪ್ಪಲಿನಲ್ಲಿ ನಡೆದಿದ್ದು ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ.
ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬರುತ್ತಿದ್ದಂತೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ದರ್ಗಾ ಬಳಿ ತಮಟೆ, ಡೊಳ್ಳು ಬಾರಿಸದಂತೆ ಕಿರಿಕ್ ಮಾಡಿ ಕಲ್ಲು ತೂರಿದ್ದಾರೆ. ಈ ವೇಳೆ ಎರಡು ಗುಂಪಿನ ಯುವಕರ ಮಧ್ಯೆ ವಾಕ್ಸಮರ ಶುರುವಾಗಿದೆ. ನೋಡನೋಡುತ್ತಿದ್ದಂತೆ ತಳ್ಳಾಟ, ನೂಕಾಟ ನಡೆದಿದೆ.ಕಿಡಿಗೇಡಿಗಳ ಕೃತ್ಯ ಖಂಡಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿಯನ್ನು ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಬೇಕು, ಕ್ರಮ ಜರುಗಿಸಬೇಕು ಅಂತ ಆಗ್ರಹಿಸಿದ್ದಾರೆ.
ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆ ಸಾಗಿತ್ತು. ದರ್ಗಾ ಎದುರು ಮೆರವಣಿಗೆ ಸಾಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಇದ್ದಕ್ಕಿದ್ದಂತೆ ಕಲ್ಲು ತೂರಿದ್ದೇ ಗಲಾಟೆಗೆ ಕಾರಣ ಆಗಿದೆ.ಕಳೆದ ವರ್ಷವೂ ಇದೇ ದರ್ಗಾ ಮುಂಭಾಗ ಗಲಾಟೆ ನಡೆದಿತ್ತು. ಮೆರವಣಿಗೆ ವೇಳೆ ದರ್ಗಾ ಮುಂದೆ ತಮಟೆ, ಡೊಳ್ಳು ಬಾರಿಸದಂತೆ ಕಿರಿಕ್ ಆಗಿತ್ತು. ಈ ಸಂದರ್ಭದಲ್ಲಿ ಕಿಡಿಗೇಡಿಗಳ ಗುಂಪು ತಲವಾರ್ ಪ್ರದರ್ಶಿಸಿ, ಜೀವ ಬೆದರಿಕೆ ಹಾಕಿದೆ. ದರ್ಗಾ ಬಳಿ ಗಣೇಶ ಮೆರವಣೆಗೆ ಬಂದರೆ ನಿಮ್ಮನ್ನು ಉಳಿಸುವುದಿಲ್ಲ ಎಂಬಂತೆ ಜೀವ ಬೆದರಿಕೆ ಹಾಕಿ ತಲವಾರ್‌ಗಳನ್ನು ತೋರಿಸಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಕಿಡಿಗೇಡಿಗಳ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಬಳಿಕ ಅವರ ಬಳಿಯಿದ್ದ ತಲವಾರ್ ಅನ್ನು ವಶಕ್ಕೆ ಪಡೆದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಿದರು.ಮಂಡ್ಯ ಎಸ್’ಪಿ ಮಲ್ಲಿಕಾರ್ಜುನ ಬಾಲದಂಡಿಯವರು ಮಾತನಾಡಿ, ಘಟನೆ ಸಂಬಂಧ ಈ ವರೆಗೂ 46 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಚೆಲುವರಾಯಸ್ವಾಮಿಯವರು, ನಮ್ಮ ನಾಗಮಂಗಲ ಶಾಂತಿ, ಸೌಹಾರ್ದತೆಯ ನೆಲೆ. ಇಲ್ಲಿ ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ. ತಪ್ಪು ಮಾಡಿರುವವರ ವಿರುದ್ಧ ಕ್ರಮ ಆಗುತ್ತದೆ. ಸಾರ್ವಜನಿಕರು ಯಾವುದೇ ವದಂತಿ ಪ್ರೇರಣೆಗಳಿಗೆ ಕಿವಿಗೊಡದೆ ಶಾಂತಿ ಮರುಸ್ಥಾಪನೆಗೆ ಸಹಕರಿಸಬೇಕೆಂದು ಕೋರುತ್ತೇನೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಾತನಾಡಿ, ವರದಿ ಪಡೆದಿದ್ದೇನೆ. ಎಲ್ಲಾ ತಪ್ಪಿತಸ್ಥರ ಬಂಧನಕ್ಕೆ ಸೂಚಿಸಿದ್ದು ಶಾಂತಿ ಮರುಸ್ಥಾಪನೆಗೆ ಅಗತ್ಯವಿರುವ ತುರ್ತು ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.


