ಮಂಗಳೂರು : 2022ರಲ್ಲಿ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ನವೆಂಬರ್ 19, 2022ರಂದು ಕಂಕನಾಡಿ ಸಮೀಪ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಭಾರಿ ಅನಾಹುತ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಗಾಯಗೊಂಡಿದ್ದರು.
ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಲಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿಯ ವಿರುದ್ಧ ಸಲ್ಲಿಸಲಾದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ದೋಷಿ ಎಂದು ತೀರ್ಪು ನೀಡಿದೆ.
ಶಾರಿಕ್ ವಿರುದ್ಧ ವಿವಿಧ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಲಾಗಿದ್ದು, 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.


