ಲಖನೌ : ಉತ್ತರ ಪ್ರದೇಶದಲ್ಲಿ ಬುಧವಾರ ರಾತ್ರಿ ಬೀಸಿದ ಭೀಕರ ಬಿರುಗಾಳಿ ಸಹಿತ ಮಳೆಗೆ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ರಾಜ್ಯದ ಹಲವೆಡೆ ಭಾರೀ ಹಾನಿ ಸಂಭವಿಸಿದೆ. ಪ್ರಯಾಗ್‌ರಾಜ್‌ನಲ್ಲಿ ಗರಿಷ್ಠ 21 ಮಂದಿ ಮೃತಪಟ್ಟಿದ್ದು, ಬದೋಹಿ, ಮಿರ್ಜಾಪುರ, ಫತೇಹ್‌ಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೀವಹಾನಿ ವರದಿಯಾಗಿದೆ. ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಅನೇಕ ಮನೆಗಳಿಗೆ ಹಾನಿಯಾಗಿದೆ.
ಭಾರೀ ಗಾಳಿಯಿಂದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಪ್ರಮುಖ ಹೆದ್ದಾರಿಗಳಲ್ಲಿ ಮರಗಳು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸೋನಭದ್ರ ಪ್ರದೇಶದಲ್ಲಿ ಭೀಕರ ಧೂಳಿನ ಬಿರುಗಾಳಿ ಉಂಟಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರಿಸರ ಕತ್ತಲಿನಿಂದ ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಎನ್‌ಡಿಆರ್‌ಎಫ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ರಸ್ತೆಗಳಿಗೆ ಬಿದ್ದ ಮರಗಳ ತೆರವು ಮತ್ತು ವಿದ್ಯುತ್ ಸಂಪರ್ಕ ಮರುಸ್ಥಾಪನೆ ಕಾರ್ಯ ಮುಂದುವರಿದಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತುರ್ತು ಪರಿಹಾರ ಕಾರ್ಯಗಳನ್ನು ವೇಗಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


