ಮಂಗಳೂರು : ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕರ್ನಾಟಕ ಗೇರುಮೇಳ ಮತ್ತು ಕಾರ್ಯಾಗಾರ ಇಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ವಹಿಸಿದ್ದರು. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಗೇರುಮೇಳವನ್ನು ಉದ್ಘಾಟಿಸಿದರು.







ಕಾರ್ಯಕ್ರಮದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಸ್ವಾಗತ ಭಾಷಣ ಮಾಡಿದರು.
ಗೇರು ಕೃಷಿ, ಮೌಲ್ಯವರ್ಧನೆ, ಸಂಸ್ಕರಣೆ ಹಾಗೂ ಮಾರುಕಟ್ಟೆ ಅವಕಾಶಗಳ ಕುರಿತು ರೈತರಿಗೆ ಮಾಹಿತಿ ನೀಡುವ ಉದ್ದೇಶದಿಂದ ಮೇಳ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದ್ದು, ವಿವಿಧ ಪ್ರದರ್ಶನ ಮಳಿಗೆಗಳು ಸಾರ್ವಜನಿಕರ ಗಮನ ಸೆಳೆದವು.
ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಈಶ್ವರ್ ಬಿ. ಖಂಡ್ರೆ, “ಬರುಬರುತ್ತ ಗೇರು ಉತ್ಪಾದನೆ ಕಡಿಮೆಯಾಗುತ್ತಿದ್ದು, ಹಿಂದೆ ಎಂಡೋಸಲ್ಫಾನ್ ಸಿಂಪಡಿಸಿರುವುದೂ ಇದಕ್ಕೆ ಪ್ರಮುಖ ಕಾರಣವಾಗಿದೆ. ಆದ್ದರಿಂದ ಗೇರು ಕೃಷಿಕರಿಗಾಗಿ ಪ್ರತ್ಯೇಕ ಮಾರುಕಟ್ಟೆ ನಿರ್ಮಾಣ ಮಾಡುವ ಅಗತ್ಯವಿದೆ,” ಎಂದು ಹೇಳಿದರು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗೇರು ಅಥವಾ ಗೋಡಂಬಿ ಬೆಳೆಸಲು ವಿಪುಲ ಅವಕಾಶಗಳಿದ್ದು, ಗೇರು ಅಭಿವೃದ್ಧಿ ನಿಗಮದ ವತಿಯಿಂದ ಗುಣಮಟ್ಟದ ಕಸಿ ಮಾಡಿದ ಗೋಡಂಬಿ ಸಸಿಗಳನ್ನು ರೈತರಿಗೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಇದಕ್ಕಾಗಿ 1 ಕೋಟಿ ರೂ. ಅನುದಾನ ನೀಡಲಾಗುತ್ತಿದ್ದು, ನಿಗಮದ ನರ್ಸರಿಗಳಲ್ಲೇ ಸಸಿಗಳನ್ನು ಬೆಳೆಸಿ ಮುಂದಿನ ವರ್ಷದಿಂದ ಸಬ್ಸಿಡಿ ದರದಲ್ಲಿ ರೈತರಿಗೆ ವಿತರಿಸಲಾಗುವುದು ಎಂದು ಘೋಷಿಸಿದರು. “ಇಂದು ನಾವು ಕಚ್ಚಾ ಗೇರು ಬೀಜವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದೇವೆ. ಹೀಗಾಗಿ ರೈತರಿಗೆ ಉತ್ತಮ ಮಾಹಿತಿ, ತಾಂತ್ರಿಕ ಮಾರ್ಗದರ್ಶನ ಮತ್ತು ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ಮೂಲಕ ಕರ್ನಾಟಕವನ್ನು ಗೇರು ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡಲಾಗುವುದು,” ಎಂದು ಸಚಿವರು ಹೇಳಿದರು.ಪಶ್ಚಿಮ ಘಟ್ಟಗಳ ಸಂರಕ್ಷಣೆ ಬಗ್ಗೆ ಒತ್ತಿ ಹೇಳಿದ ಸಚಿವರು, “ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಿಂದ ಮಳೆಯ ಸ್ವರೂಪವೇ ಬದಲಾಗುತ್ತಿದೆ. ಹೀಗಾಗಿ ಹಸಿರು ಹೊದಿಕೆ ಹೆಚ್ಚಿಸಿ, ವೃಕ್ಷ ಸಂರಕ್ಷಣೆಗೆ ಎಲ್ಲರೂ ಸಂಕಲ್ಪ ಮಾಡಬೇಕು,” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್, “ಗೇರು ಕೃಷಿ ವರ್ಷಕ್ಕೊಮ್ಮೆ ಉತ್ತಮ ಇಳುವರಿ ನೀಡುವ ಕೃಷಿಯಾಗಿದ್ದು, ಇದನ್ನು ಬೆಳೆಸಲು ರೈತರು ಸಾಕಷ್ಟು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಗೇರು ಉದ್ಯಮಕ್ಕೆ ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ,” ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಗೇರು ಬೀಜಗಳನ್ನು ವಿದೇಶಗಳಿಂದ ಆಮದು ಮಾಡಲಾಗುತ್ತಿರುವುದರಿಂದ ದೇಶೀಯ ಮಟ್ಟದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಗೇರು ಕೃಷಿ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡಬೇಕು ಎಂದು ಅವರು ಆಗ್ರಹಿಸಿದರು.
ಮೇಳದ ಅಂಗವಾಗಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ 12 ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ರಾಜೇಗೌಡ, ಅಶೋಕ್ ಕುಮಾರ್ ರೈ, ಮಾಜಿ ಸಚಿವ ರಮಾನಾಥ ರೈ, ಜನಪ್ರತಿನಿಧಿಗಳು, ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.


