ಸುಳ್ಯ : ದೇಶಾದ್ಯಂತ ‘ಸೇತುವೆಗಳ ಸರದಾರ’ ಹಾಗೂ ‘ಭಾರತದ ಸೇತುವೆ ಮನುಷ್ಯ’ (Bridge Man of India) ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಉತ್ತರಾಖಂಡದ ಪವಿತ್ರ ಕ್ಷೇತ್ರಗಳ ಪ್ರವಾಸ ಕೈಗೊಂಡಿದ್ದರು.
ಡಾ. ಗಿರೀಶ್ ಭಾರದ್ವಾಜ್ ಅವರು ದೇಶದ ವಿವಿಧ ರಾಜ್ಯಗಳ ಗ್ರಾಮೀಣ ಪ್ರದೇಶಗಳಲ್ಲಿ ನೂರಾರು ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಜನರ ಬದುಕಿಗೆ ಹೊಸ ಸಂಪರ್ಕ ಕಲ್ಪಿಸಿದ್ದರು. ನದಿ-ತೊರೆಗಳಿಂದ ಸಂಪರ್ಕ ಕಡಿತಗೊಂಡಿದ್ದ ಅನೇಕ ಹಳ್ಳಿಗಳಿಗೆ ಅವರು ನಿರ್ಮಿಸಿದ ಸೇತುವೆಗಳು ಜೀವನಾಡಿಯಾಗಿದ್ದವು. ಗ್ರಾಮೀಣ ಅಭಿವೃದ್ಧಿ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ನೀಡಿದ ಅಪೂರ್ವ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ 2017ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ಮೃತರು ಮೂವರು ಮಕ್ಕಳನ್ನು ಅಗಲಿದ್ದು, ಪತ್ನಿ ಉಷಾ ಅವರು ಈ ಹಿಂದೆ ನಿಧನರಾಗಿದ್ದರು. ಡಾ. ಗಿರೀಶ್ ಭಾರದ್ವಾಜ್ ಅವರ ಅಗಲಿಕೆಗೆ ವಿವಿಧ ಗಣ್ಯರು, ಸಾರ್ವಜನಿಕರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


