ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಘಟ್ಟದಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡ ಜಿಲ್ಲೆಯ ಮೂಲದ ಸ್ನೇಹಿತರ ತಂಡ ಕ್ರೂಸರ್ ವಾಹನದಲ್ಲಿ ಗೋಕರ್ಣ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಯಲ್ಲಾಪುರ–ಅಂಕೋಲಾ ರಾಷ್ಟ್ರೀಯ ಹೆದ್ದಾರಿಯ ಆರತಿಬೈಲು ಘಟ್ಟದಲ್ಲಿ ಎದುರಿನಿಂದ ಬಂದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.


