ಚಿಕ್ಕೋಡಿ : ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಹಾಗೂ ಕಾಗವಾಡ ತಾಲೂಕಿನ ಉಗಾರವನ್ನು ಸಂಪರ್ಕಿಸುವ ಪ್ರಮುಖ ಸೇತುವೆ ಜಲಾವೃತವಾಗಿದೆ. ಇದರಿಂದ ಕರ್ನಾಟಕ–ಮಹಾರಾಷ್ಟ್ರ ನಡುವಿನ ರಸ್ತೆ ಸಂಪರ್ಕ ತಾತ್ಕಾಲಿಕವಾಗಿ ಸಂಪೂರ್ಣ ಸ್ಥಗಿತಗೊಂಡಿದೆ.

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಉಗಾರ–ಕುಡಚಿ ಸೇತುವೆ ಎರಡೂ ರಾಜ್ಯಗಳ ಜನರ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ಸೇತುವೆಯ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು, ಸೇತುವೆ ಬಳಿ ಬ್ಯಾರಿಕೇಡ್ ಅಳವಡಿಸಿ ಸಾರ್ವಜನಿಕರು ಜಲಾವೃತ ರಸ್ತೆಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ನದಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.


