ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದಲ್ಲಿ ಕಳೆದ ವರ್ಷ ಸಂಭವಿಸಿದ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಕೈಗೆತ್ತಿಕೊಂಡಿದ್ದು, ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
2025ರ ಮೇ 30ರಂದು ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಜೀವಹಾನಿ ಸಂಭವಿಸಿದ್ದು, ಅಶ್ವಿನಿ ಎಂಬ ಯುವತಿ ಗಂಭೀರವಾಗಿ ಗಾಯಗೊಂಡು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗಿದ್ದರು. ಈ ಘಟನೆಯ ಹಿನ್ನೆಲೆ ರಸ್ತೆ ಕಾಮಗಾರಿ ಮತ್ತು ಭೂಕುಸಿತದ ನಡುವಿನ ಸಂಬಂಧವನ್ನು ಸ್ವತಂತ್ರವಾಗಿ ತನಿಖೆ ನಡೆಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ರಸ್ತೆ ನಿರ್ಮಾಣದ ವೇಳೆ ಭಾರತೀಯ ರಸ್ತೆ ಕಾಂಗ್ರೆಸ್ (IRC) ಮಾರ್ಗಸೂಚಿಗಳು ಹಾಗೂ ತಾಂತ್ರಿಕ ಮಾನದಂಡಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಸ್ವತಂತ್ರ ಇಂಜಿನಿಯರ್‌ಗಳು ಮತ್ತು ಭೂತಾಂತ್ರಿಕ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸುವಂತೆ ಮನವಿ ಮಾಡಲಾಗಿದೆ.
ಭೂಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ, ಶಾಶ್ವತ ಅಂಗವೈಕಲ್ಯಕ್ಕೊಳಗಾದವರಿಗೆ ಹಾಗೂ ಆಸ್ತಿ ನಷ್ಟ ಅನುಭವಿಸಿದವರಿಗೆ ಸಮರ್ಪಕ ಪರಿಹಾರ ನೀಡಬೇಕು. ಅಲ್ಲದೆ, ಕರ್ತವ್ಯಲೋಪ ಎಸಗಿದ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ಸಂಬಂಧಪಟ್ಟವರ ವಿರುದ್ಧ ಕಾನೂನು ಹಾಗೂ ಶಿಸ್ತು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ.
ಇದೇ ರೀತಿಯ ದುರಂತಗಳು ಮರುಕಳಿಸದಂತೆ ಇಳಿಜಾರು ಪ್ರದೇಶಗಳಲ್ಲಿ ವೈಜ್ಞಾನಿಕ ಸುರಕ್ಷತಾ ಕ್ರಮಗಳು, ಇಳಿಜಾರು ಸ್ಥಿರೀಕರಣ (Slope Stabilization), ಸಮರ್ಪಕ ನೀರು ಹರಿವಿನ ವ್ಯವಸ್ಥೆ ಹಾಗೂ ಅಗತ್ಯ ತಡೆಗೋಡೆಗಳ ನಿರ್ಮಾಣವನ್ನು ತಕ್ಷಣ ಕೈಗೊಳ್ಳುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಹೈಕೋರ್ಟ್ ಸರ್ಕಾರದ ಉತ್ತರವನ್ನು ಕೋರಿದ್ದು, ಮುಂದಿನ ವಿಚಾರಣೆಯಲ್ಲಿ ಪ್ರಕರಣದ ಕುರಿತು ಮಹತ್ವದ ಬೆಳವಣಿಗೆಗಳು ನಿರೀಕ್ಷಿಸಲಾಗಿದೆ.


