Saturday, July 25, 2026
Homeಜಿಲ್ಲೆಮಂಗಳೂರು : ರಸ್ತೆ ಅಪಘಾತ ಸಂತ್ರಸ್ತರಿಗೆ 'ಪಿಎಂ ರಾಹತ್' ಯೋಜನೆ ಕಟ್ಟುನಿಟ್ಟಾಗಿ ಜಾರಿ: ಆಸ್ಪತ್ರೆಗಳಿಗೆ ಸಂಸದ...

ಮಂಗಳೂರು : ರಸ್ತೆ ಅಪಘಾತ ಸಂತ್ರಸ್ತರಿಗೆ ‘ಪಿಎಂ ರಾಹತ್’ ಯೋಜನೆ ಕಟ್ಟುನಿಟ್ಟಾಗಿ ಜಾರಿ: ಆಸ್ಪತ್ರೆಗಳಿಗೆ ಸಂಸದ ಬ್ರಿಜೇಶ್ ಚೌಟ ಎಚ್ಚರಿಕೆ.

ಮಂಗಳೂರು : ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ತುರ್ತು ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ‘ಪಿಎಂ ರಾಹತ್’ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಂಬಂಧ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

oplus_3145728

ಸಭೆಯಲ್ಲಿ ಮಾತನಾಡಿದ ಅವರು, ಅಪಘಾತ ಸಂತ್ರಸ್ತರನ್ನು ತುರ್ತು ಸಂದರ್ಭಗಳಲ್ಲಿ ದಾಖಲಿಸದೆ ನಿರ್ಲಕ್ಷ್ಯ ತೋರಿಸುವ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ದಕ್ಷಿಣ ಕನ್ನಡವನ್ನು ಈ ಯೋಜನೆಯ ಅನುಷ್ಠಾನದಲ್ಲಿ ರಾಜ್ಯಕ್ಕೆ ಮಾದರಿ ಜಿಲ್ಲೆಯನ್ನಾಗಿ ರೂಪಿಸಬೇಕೆಂದು ಕರೆ ನೀಡಿದರು.

‘ಪಿಎಂ ರಾಹತ್’ ಯೋಜನೆಯಡಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 7 ದಿನಗಳವರೆಗೆ ಗರಿಷ್ಠ ₹1.50 ಲಕ್ಷದವರೆಗೆ ಉಚಿತ ತುರ್ತು ಚಿಕಿತ್ಸೆ ನೀಡಲಾಗುತ್ತದೆ. ಗಾಯಾಳು ದಾಖಲಾಗಿದ 24 ಗಂಟೆಗಳೊಳಗೆ (ತುರ್ತು ಪರಿಸ್ಥಿತಿಯಲ್ಲಿ 48 ಗಂಟೆಗಳೊಳಗೆ) e-DAR ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸುವುದು ಕಡ್ಡಾಯವಾಗಿದ್ದು, ಬಳಿಕ ಪೊಲೀಸ್ ಇಲಾಖೆಯ ಅನುಮೋದನೆಯೊಂದಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಪ್ರತಿ ತಾಲೂಕು ಮಟ್ಟದಲ್ಲೂ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಯೋಜನೆಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಬೇಕು, ಫಲಾನುಭವಿಗಳ ಮಾಹಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಮಾಸಿಕ ಪರಿಶೀಲನಾ ಸಭೆ ನಡೆಸಬೇಕು ಹಾಗೂ ಸಾರ್ವಜನಿಕರಲ್ಲಿ ಯೋಜನೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಸಂಸದರು ಸೂಚಿಸಿದರು.

ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್. ತಿಮ್ಮಯ್ಯ, ಡಿಸಿಪಿ ರವಿಶಂಕರ್ ಸೇರಿದಂತೆ ಆರೋಗ್ಯ, ಪೊಲೀಸ್ ಇಲಾಖೆ ಹಾಗೂ ವಿವಿಧ ಆಸ್ಪತ್ರೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular