ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಅಕ್ರಮವಾಗಿ ಕಾಡುಹಂದಿಗಳನ್ನು ಬೇಟೆಯಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ತಂಡದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಗುಂಡು ಹಾರಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ನಿವಾಸಿ ಅನ್ವಿತ್ ಎಂದು ಗುರುತಿಸಲಾಗಿದೆ.
ಕಾರ್ಯಾಚರಣೆಯ ವೇಳೆ ಆತನ ಕಾಲಿಗೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ದರ್ಶನ್, ಮಂಜು ಹಾಗೂ ಕಿರಣ್ ಎಂಬ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಆಲ್ಟೋ ಕಾರನ್ನು ತಡೆದು ತಪಾಸಣೆ ನಡೆಸಲು ಸಿಬ್ಬಂದಿ ಮುಂದಾದಾಗ, ಕಾರಿನಲ್ಲಿದ್ದ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಎಚ್ಚರಿಕೆಯಾಗಿ ಗುಂಡು ಹಾರಿಸಿದ್ದು, ಅನ್ವಿತ್‌ನನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಎರಡು ಕಾಡುಹಂದಿಗಳ ಮೃತದೇಹ, ಒಂದು ಮಚ್ಚು, ಎರಡು ಟಾರ್ಚ್‌ಗಳು, ಒಂದು ಟಾರ್ಪಲ್, ಒಂದು ಮೊಬೈಲ್ ಫೋನ್ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಆಲ್ಟೋ ಕಾರು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದು, ಪರಾರಿಯಾದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.


