ಉಡುಪಿ : ಕಾರ್ಕಳ ಪೊಲೀಸ್ ಇಲಾಖೆಯಲ್ಲಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಕಾರ್ಕಳ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಎಎಸ್‌ಪಿ) ನಡೆಸಿದ ಪ್ರಾಥಮಿಕ ತನಿಖೆಯ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಅಮಾನತುಗೊಂಡವರಲ್ಲಿ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ ಸೇರಿದ್ದಾರೆ.
ಇವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಬಾಕಿ ಇರುವ ಹಿನ್ನೆಲೆಯಲ್ಲಿ ಅಮಾನತು ಆದೇಶ ಹೊರಡಿಸಲಾಗಿದ್ದು, ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಜಾರಿಯಲ್ಲಿರಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದ್ದು, ಅಂತಿಮ ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.


