ಇಸ್ಲಾಮಾಬಾದ್ : ಪಾಕಿಸ್ತಾನದಲ್ಲೂ ಜೆನ್ ಜಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಸೇನಾಧಿಕಾರಿಯೊಬ್ಬರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಪರಿಸ್ಥಿತಿಯಿಂದ ತಪ್ಪಿಸಿಕೊಳ್ಳಲು ಸೇನಾಧಿಕಾರಿ ಪಿಸ್ತೂಲ್ ಹೊರತೆಗೆದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಇಸ್ಲಾಮಾಬಾದ್‌ನ ಸರ್ಹಾದ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕ ಹಾಗೂ ತರಗತಿಗಳು ಸರಿಯಾಗಿ ನಡೆಯದಿರುವುದನ್ನು ಖಂಡಿಸಿ ಕ್ಯಾಂಪಸ್‌ನೊಳಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯ ಆಡಳಿತದ ನಡುವೆ ತೀವ್ರ ವಾಗ್ವಾದ ನಡೆದಿದೆ.
ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲು ವಿಶ್ವವಿದ್ಯಾಲಯದ ವಿದ್ಯಾರ್ಥಿ ವ್ಯವಹಾರಗಳ ಮುಖ್ಯಸ್ಥೆ ಡಾ. ಐನಾ ಅವರನ್ನು ಕಳುಹಿಸಲಾಗಿತ್ತು. ಆದರೆ ಮಾತುಕತೆ ವೇಳೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರು ತಮ್ಮ ಪತಿ, ಲೆಫ್ಟಿನೆಂಟ್ ಕರ್ನಲ್ ಅಸ್ಸಂದ್ಯಾರ್ ವಾಲಿ ಅವರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದರು ಎನ್ನಲಾಗಿದೆ.
ಈ ವೇಳೆ ಪ್ರತಿಭಟನಾಕಾರರು ಸೇನಾಧಿಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ತಮ್ಮನ್ನು ಸುತ್ತುವರಿದ ವಿದ್ಯಾರ್ಥಿಗಳಿಂದ ತಪ್ಪಿಸಿಕೊಳ್ಳಲು ಅವರು ಪಿಸ್ತೂಲ್ ಹೊರತೆಗೆದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಘಟನೆ ಬಳಿಕ ಸೇನಾಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ವಿದ್ಯಾರ್ಥಿಗಳ ಪ್ರತಿಭಟನೆ, ಸೇನಾಧಿಕಾರಿಯ ಗುಂಡಿನ ಸದ್ದು ಹಾಗೂ ನಂತರದ ಪೊಲೀಸ್ ಕ್ರಮದಿಂದಾಗಿ ಸರ್ಹಾದ್ ವಿಶ್ವವಿದ್ಯಾಲಯದ ಆವರಣದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

