ಚಾಮರಾಜನಗರ ; ಗುಂಡ್ಲುಪೇಟೆ ತಾಲೂಕಿನ ಹಿರಿಕಟ್ಟೆ ಗೇಟ್ ಬಳಿ ಶನಿವಾರ ತಡರಾತ್ರಿ ಕಾರು ಮತ್ತು ತರಕಾರಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಸುಟ್ಟು ಕರಕಲಾದ ಘಟನೆ ನಡೆದಿದೆ.
ಮೈಸೂರಿನ ಮುಜಾಮಿಲ್ ಅಹಮದ್ (35) ಮೃತ ವ್ಯಕ್ತಿ. ಸರಕು ಸಾಗಣೆ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಊಟಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಮೈಸೂರು ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸುಟ್ಟು ಕರಕಲಾಗಿದ್ದಾನೆ ಎಂದು ಬೇಗೂರು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನ ಬೆಂಕಿಯನ್ನು ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಭೇಟಿ ನೀಡಿದ್ದಾರೆ. ಬೇಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ


