ಕಲಬುರಗಿ : ಇದೇ ನವೆಂಬರ್ 11 ಹಾಗೂ 12 ರಂದು ತಾಲೂಕು/ಜಿಲ್ಲಾ ಕೇಂದ್ರಗಳಿಂದ ಬೆಂಗಳೂರು, ಇತರೆ ಪ್ರಮುಖ ಸ್ಥಳಗಳಿಗೆ ಒಟ್ಟು 600 ಹೆಚ್ಚುವರಿ (ಬಸ್) ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ತಿಳಿಸಿದೆ.
ದೀಪಾವಳಿ ಹಬ್ಬದ ಹಾಗೂ ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರೆಯ ನಿಮಿತ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದೆ.ಹಬ್ಬ ಮುಗಿದ ನಂತರ ಮರಳಿ ಹೋಗುವವರಿಗೆ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಇದೇ ನವೆಂಬರ್ 14 ರಿಂದ 16ರವರೆಗೆ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಕ.ಕ.ರ.ಸಾ ನಿಗಮದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಬೀದರ್, ಯಾದಗಿರ, ರಾಯಚೂರು, ಬಳ್ಳಾರಿ, ಕೊಪ್ಪಳ, ಹೊಸಪೇಟೆ ಹಾಗೂ ವಿಜಯಪುರ ಜಿಲ್ಲೆಗಳಿಂದ ಬೆಂಗಳೂರು, ಹೈದ್ರಾಬಾದ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಶಿವಮೊಗ್ಗ ಮತ್ತು ಬೆಳಗಾವಿ ಮಾರ್ಗಗಳಲ್ಲಿ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುತ್ತದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿ ಇರುವ 16 ಗಣಕೀಕೃತ ಬುಕ್ಕಿಂಗ್ ಕೌಂಟರ್ಗಳ ಮುಖಾಂತರ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ಅಪ್ ಪಾಯಿಂಟ್ನ ಹೆಸರನ್ನು ಗಮನಿಸಬೇಕು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ 5 ರಷ್ಟು ರಿಯಾಯತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ 10 ರಿಯಾಯತಿ ನೀಡಲಾಗುವುದು.
ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರು ಸದರಿ ಸಾರಿಗೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.


