ಚೆನ್ನೈ : ನೆಲ ಮಹಡಿಯಲ್ಲಿನ ರಿಸೆಪ್ಷನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕ್ಷಣಮಾತ್ರದಲ್ಲಿ ಅದು ಇಡೀ ಆಸ್ಪತ್ರೆಯನ್ನು ವ್ಯಾಪಿಸಿದ ಘಟನೆ ಗುರುವಾರ ರಾತ್ರಿ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪ್ರಮುಖ ಆಸ್ಪತ್ರೆಯಲ್ಲಿ ನಡೆದಿದೆ.
ಅಗ್ನಿ ಅವಘಡ ಸಂಭವಿಸಿ ಕನಿಷ್ಠ 6 ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ.
ರಿಸೆಪ್ಷನ್ ಹಾಲ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಕಾರ, ಅಗ್ನಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಆವರಿಸಿದ ದಟ್ಟವಾದ ಹೊಗೆಯಿಂದ ಹಲವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಬೆಂಕಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟಿದ್ದು ಸರಿಸುಮಾರು 50 ಆಂಬ್ಯುಲೆನ್ಸ್‌ಗಳನ್ನು ಬಳಸಿಕೊಂಡು ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ, ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕನಿಷ್ಠ 30 ರೋಗಿಗಳನ್ನು ಚಿಕಿತ್ಸೆಗಾಗಿ ದಿಂಡುಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.