ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಇಬ್ಬರು ಸಾವನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಗೌಡಗೆರೆ ಸಮೀಪ ನಡೆದಿದೆ.


ಮೃತರನ್ನು ಸೂರಜ್ (19), ಅನೀಶ್ (18) ಎಂದು ತಿಳಿದಿದೆ.ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. KA-17-Z-2236 ನಂಬರ್‌ನ ಇಕೋ ಸ್ಪೋರ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ತೆರಳುತ್ತಿದ್ದು ಅತಿವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಪಲ್ಟಿಯಾಗಿದೆ.
ಭುವನ್ (18) ಸ್ಥಿತಿ ಗಂಭೀರ ವಾಗಿದ್ದು ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿಶಾಲ್ (19), ಪೂರ್ಣಚಂದ್ರ (18) ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವೀಕೆಂಡ್ ಹಿನ್ನೆಲೆಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ತೆರಳುತಿದ್ದರೆಂದು ಮಾಹಿತಿ ದೊರೆತಿದೆ. ಇದೇ ವೇಳೆ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದ ಶಾಸಕ ಸಿ.ಎನ್.ಬಾಲಕೃಷ್ಣ ಅಪಘಾತದ ಸುದ್ದಿ ತಿಳಿದು ಕಾರು ನಿಲ್ಲಿಸಿ ಗಾಯಾಳುಗಳನ್ನು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.
ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.