ಉಡುಪಿ : ಕಾರ್ಕಳ ಪೇಟೆಯ ಅಭಯ್ (23) ಎಂಬಾತನನ್ನು ಕಾರ್ಕಳ ಪೊಲೀಸರು ಆಗಸ್ಟ್ 23 ರಂದು 21 ವರ್ಷದ ಮಹಿಳೆಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಇಬ್ಬರು ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಮುಖ ಆರೋಪಿ ಅಲ್ತಾಫ್ಗೆ ಅಭಯ್ ಮಾದಕ ದ್ರವ್ಯಗಳನ್ನು ಸರಬರಾಜು ಮಾಡಿದ್ದು, ಸಂತ್ರಸ್ತೆಗೆ ಅಮಲು ನೀಡಿ ಅತ್ಯಾಚಾರ ಎಸಗಲು ಬಳಸಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಅರುಣ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಘಟನೆಯ ನಂತರ ಅಲ್ತಾಫ್ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪವೂ ಅಭಯ್ ಮೇಲಿದೆ. ಆತನನ್ನು ಆಗಸ್ಟ್ 27 ರಂದು ಮಂಗಳವಾರ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪೊಲೀಸರು ಅಭಯನನ್ನು ಪ್ರಶ್ನಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಅಭಯ್ ಅತ್ಯಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅಭಯ್ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಪಾತ್ರವನ್ನು ತಿಳಿಯಲು ಪೊಲೀಸರು ಇಬ್ಬರು ಶಂಕಿತರನ್ನು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ಡಾ.ಅರುಣ್ ಹೇಳಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಶೀಘ್ರ ಪೂರ್ಣಗೊಳಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಅಲ್ತಾಫ್ ಮತ್ತು ಇನ್ನೋರ್ವ ಆರೋಪಿ ಸವೇರಾ (ಕ್ಸೇವಿಯರ್) ರಿಚರ್ಡ್ ಕ್ವಾಡ್ರಸ್ ಅವರನ್ನು ಈಗಾಗಲೇ ಬಂಧಿಸಿದ್ದಾರೆ. 21 ವರ್ಷದ ಅತ್ಯಾಚಾರ ಸಂತ್ರಸ್ತೆಯ ರಕ್ತದ ಮಾದರಿಯಲ್ಲಿ ಮಾದಕ ವಸ್ತುಗಳು ಪತ್ತೆಯಾಗಿವೆ.
ಕರ್ನಾಟಕ ಬೋವಿ ವಡ್ಡರ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿವಿಧ ದಲಿತ ಸಂಘಟನೆಗಳು ತಮ್ಮ ಸಮುದಾಯದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನು ಬಂಧಿಸುವಂತೆ ಕೋರಿ ಕಾರ್ಕಳದಲ್ಲಿ ಆಗಸ್ಟ್ 26ರ ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಭಾಗವಹಿಸಿದ್ದರು.


