ಉಡುಪಿ : ರಾಷ್ಟ್ರೀಯ ಹೆದ್ದಾರಿ-66ರ ಕೋಟ ಜಂಕ್ಷನ್‌ನಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ, ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ (65) ಮೃತಪಟ್ಟಿದ್ದಾರೆ. ಕೋಟ ಸಮೀಪದ ಮಣೂರು ನಿವಾಸಿಯಾಗಿದ್ದ ಅವರು ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸೈಕಲ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಗುರುದಾಸ್ ಶೆಣೈ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ.
ಅಪಘಾತದಲ್ಲಿ ಕಾರು ಚಾಲಕ ಪ್ರದೀಪ್ ಕಾಂಚನ್ (ಬೀಜಾಡಿ, ಕೋಟೇಶ್ವರ) ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುವನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

