ಚಿಕ್ಕಮಗಳೂರು : ವಸತಿ ಶಾಲೆಯೊಂದರಲ್ಲಿ 8ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ನಿಶದ್ (14) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.
ಮಲಗಿದ್ದ ಕೊಠಡಿಯಲ್ಲಿ ವಿದ್ಯಾರ್ಥಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇತರೆ ವಿದ್ಯಾರ್ಥಿಗಳು ಕೂಡಲೇ ಗಮನಿಸಿ ಆತನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ತಕ್ಷಣ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬಾಲಕನ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಯನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಗ್ಲುಕೋಸ್ ಹಾಗೂ ವೆಂಟಿಲೇಟರ್ ನೆರವಿನೊಂದಿಗೆ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

