ಚಿಕ್ಕಮಗಳೂರು : ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಒಳಗಾಗಿರುವ ಸಿ.ಟಿ. ರವಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳದಿದ್ದರೆ ಕೊಲೆ ಮಾಡುವುದಾಗಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಅನಾಮಧೇಯ ವ್ಯಕ್ತಿಗಳು ಪತ್ರ ಬರೆದು ಬೆದರಿಕೆ ಹಾಕಿದ್ದಾರೆ.
ಚಿಕ್ಕಮಗಳೂರಿನ ಸಿ.ಟಿ. ರವಿ ಅವರನಿವಾಸಕ್ಕೆ ಈ ಅನಾಮಧೇಯ ಪತ್ರ ಬಂದಿದ್ದು. ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ. ಕೂಡಲೇ ನೀವು ಬೆಳಗಾವಿಗೆ ಬಂದು ಅಭಿಮೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ.
ಇನ್ನು ೧೫ ದಿನದಲ್ಲಿ ಬೆಳಗಾವಿಯ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿದು ಸಾಯಿಸುತ್ತೇವೆ, ನಿಮ್ಮ ಮಗನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ದ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿದ್ದರು. ಈ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿರುವ ಬಗ್ಗೆ ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.