ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಗಾವತಿಯಿಂದ ಕೊಲ್ಹಾಪುರಕ್ಕೆ ಸಂಚರಿಸುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್, ಟಿಪ್ಪರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ಬಸ್ ಚಾಲಕನನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ಸಂಗಪ್ಪ ತಳವಾರ ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ 12 ಪ್ರಯಾಣಿಕರನ್ನು ಸಂಕೇಶ್ವರ ಹಾಗೂ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯು ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

