ಚಿತ್ರದುರ್ಗ : ತಾಲೂಕಿನ ಕವಾಡಿಗರಹಟ್ಟಿ ಗ್ರಾಮದಲ್ಲಿ ಮಂಗಳವಾರ ಕಲುಷಿತ ನೀರು ಕುಡಿದು ಗ್ಯಾಸ್ಟ್ರೋಎಂಟರೈಟಿಸ್ನಿಂದ ಬಳಲುತ್ತಿದ್ದ 23 ವರ್ಷದ ಮಹಿಳೆ ಸಾವನ್ನಪ್ಪಿದ್ದು, 18 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ ಮೃತ ಮಹಿಳೆಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಒಂಬತ್ತು ಮಕ್ಕಳು ಮತ್ತು ನಾಲ್ವರು ಮಹಿಳೆಯರು. ಗಂಗಮ್ಮ ಮತ್ತು ಸೃಷ್ಟಿ ಅವರನ್ನು ನಗರದ ಬಸವೇಶ್ವರ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಗರಸಭೆಯಿಂದ ಸರಬರಾಜು ಮಾಡುವ ನೀರು ಕಲುಷಿತಗೊಂಡಿದ್ದು ನೀರಿನ ಟ್ಯಾಂಕ್ ತೊಳೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರಸಭೆ ಅಧಿಕಾರಿಗಳ ವಿರುದ್ಧ ಕವಾಡಿಗರಹಟ್ಟಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ವೈದ್ಯರ ಪ್ರಕಾರ, ಕವಾಡಿಗರಹಟ್ಟಿಯ ಅನೇಕ ಗ್ರಾಮಸ್ಥರು ಗ್ಯಾಸ್ಟ್ರೋಎಂಟರೈಟಿಸ್ ಎಂದು ದೂರಿದರು ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಏತನ್ಮಧ್ಯೆ, ನಗರ ಪಾಲಿಕೆಯಿಂದ ಸರಬರಾಜು ಮಾಡುವ ನೀರನ್ನು ಸೇವಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ದಿವ್ಯಪ್ರಭು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಕವಾಡಿಗರಹಟ್ಟಿಯ ಮಂಜುಳಾ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡುದ್ದಾರೆ. ಅವರಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತೀವ್ರ ಅಸ್ವಸ್ಥರಾಗಿದ್ದ ಐವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖುದ್ದಾಗಿ ಭೇಟಿ ನೀಡಿದ್ದೇನೆ, ಸದ್ಯ ಅಸ್ವಸ್ಥರೆಲ್ಲರ ಆರೋಗ್ಯ ಸ್ಥಿರವಾಗಿದೆ. ಮುಂಜಾಗೃತ ಕ್ರಮವಾಗಿ ಕವಾಡಿಗರಹಟ್ಟಿಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದೇವೆ. ಕುಡಿಯುವ ನೀರು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ಕವಾಡಿಗರಹಟ್ಟಿಯಲ್ಲಿ ತಾತ್ಕಾಲಿಕವಾಗಿ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಮಂಜುಳಾ ಸಾವಿನ ಕಾರಣ ಏನೆಂಬುದು ಪರೀಕ್ಷೆ ಬಳಿಕ ತಿಳಿಯಲಿದೆ ಎಂದರು. ಹಾಗೂ ಇದೇ ವೇಳೆ ಕುಡಿಯುವ ನೀರು ಸರಬರಾಜು ಟ್ಯಾಂಕ್ ಗೆ ವಿಷಪ್ರಾಶನ ಶಂಕೆ ಇರುವ ವಿಚಾರಕ್ಕೆ ನೀರಿನ ಪರೀಕ್ಷಾ ವರದಿ ಬಳಿಕ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತೆ ಎಂದರು.


