ನವದೆಹಲಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ. ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ಪ್ರಧಾನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.
ಪ್ರಸ್ತುತ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವಾಲಯದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಪ್ರಲ್ಹಾದ್ ಜೋಶಿ ಅವರು, ಇನ್ನು ಮುಂದೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನೂ ವಹಿಸಲಿದ್ದಾರೆ.
ಹೊಸ ಜವಾಬ್ದಾರಿ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿದ ಜೋಶಿ, “ಕರ್ತವ್ಯಪ್ರಜ್ಞೆ ಮತ್ತು ವಿನಯದಿಂದ ಈ ಹೊಣೆಗಾರಿಕೆಯನ್ನು ಸ್ವೀಕರಿಸಿದ್ದೇನೆ. ದೇಶದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಂಪೂರ್ಣ ಸಮರ್ಪಣೆಯೊಂದಿಗೆ ಕೆಲಸ ಮಾಡುತ್ತೇನೆ” ಎಂದು ತಿಳಿಸಿದ್ದಾರೆ. ಅವರ ನೇಮಕ ತಕ್ಷಣದಿಂದಲೇ ಜಾರಿಗೆ ಬಂದಿದೆ.


