ಬೆಂಗಳೂರು : ಯುವಕರು ಮೋದಿ…ಮೋದಿ ಎಂದು ಕೂಗಿದರೆ ಕಪಾಳಕ್ಕೆ ಹೊಡೆಯಿರಿ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತನಾಡಿದ್ದು ಈ ಬಗ್ಗೆ ಸಾಮಾಜಿಕಜಾಲತಾಣದಲ್ಲಿ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಹಾಗೂ ಜನಸಾಮನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮೋದಿಯವರಿಗೆ ಜೈಕಾರ ಹಾಕುವವರ ಕಪಾಳಕ್ಕೆ ಹೊಡೆಯಬೇಕೆ? ಯಾವ ಕಾರಣಕ್ಕೆ? ಭಾರತದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಕ್ಕಾಗಿಯೇ? ಅಥವಾ ಜನರ ಒಳಿತಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಕ್ಕಾಗಿಯೇ? ಎಂದು ಸಚಿವ ಶಿವರಾಜ ತಂಗಡಿಗಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ? ಇನ್ನೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎನ್ನುತ್ತಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ 5-10 ವರ್ಷ ಸುಳ್ಳು ಹೇಳುತ್ತಾರೆ. ಈ ಸುಳ್ಳು ಕೇಳಿಕೊಂಡು ಹೋಗಬೇಕಾ? ಎಂದು ಹೇಳಿದ್ದರು .
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಒಳಗೊಂಡ ಬಿಜೆಪಿ ನಿಯೋಗ ಇಂದು(ಮಾರ್ಚ್ 25) ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.