ಬೆಂಗಳೂರು : ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ನಂತರ ದಿನಕ್ಕೊಂದು ಭಾಗ್ಯಗಳನ್ನು ನೀಡುತ್ತಲೇ ಇದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸಾರಿಗೆ ಭಾಗ್ಯವನ್ನು ಸರ್ಕಾರ ಜಾರಿ ಮಾಡಿದ್ದು, ಸರ್ಕಾರಿ ಶಾಲೆಯ ಮಕ್ಕಳಿಗೆ ಶಾಲೆಗಳಿಗೆ ತೆರಳಲು ಉಚಿತ ಬಸ್ ಸೌಲಭ್ಯ ಸಿಗಲಿದೆ.
ಉಪಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯ ಸರ್ಕಾರದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಓದುವ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಮಾಡುವುದಾಗಿ ಘೋಷಿಸಿದ್ದಾರೆ.
ಸರ್ಕಾರದ ಕೆಪಿಎಸ್ಶಾಲೆಗಳಲ್ಲಿ ಎಲ್ಕೆಜಿಯಿಂದ ಪಿಯುಸಿತನಕ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆಯ ಸಾರಿಗೆ ಭಾಗ್ಯ ಯೋಜನೆಯನ್ನು ಜಾರಿ ಮಾಡುತ್ತಿರುವುದಾಗಿ ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ ಹಾಗೂ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ ಶಾಲೆಯ ಮಕ್ಕಳು ಬಸ್ ವ್ಯವಸ್ಥೆಯ ಸದುಪಯೋಗಪಡಿಸಿಕೊಳ್ಳುವಂತೆ
ಅವರು ಹೇಳಿದ್ದಾರೆ.
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆ ಇದಾಗಿದೆ ಎಂದೂ ಹೇಳಿರುವ ಅವರು, ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದಿಂದ ಮಹತ್ವದ ಚಿಂತನೆ ಇದಾಗಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರದ ಉಚಿತ ಸಾರಿಗೆ ಭಾಗ್ಯ ಯೋಜನೆಯಿಂದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಿದಂತಾಗುತ್ತದೆ ಎಂದು ಅವರು ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ. ಈ ಯೋಜನೆ ಯಾವಾಗಿನಿಂದ ಜಾರಿಯಾಗಲಿದೆ ಎಂಬ ಬಗ್ಗೆ ಇನ್ನೂ ಮಾಹಿತಿಗಳು ಬರಬೇಕಿದೆ.