ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಹಾಲಿನ ಟ್ಯಾಂಕರ್ ಹಾಗೂ ಗೋವಿನ ಜೋಳದ ಚೀಲಗಳನ್ನು ಸಾಗಿಸುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಲಾರಿಗೆ ಬೆಂಕಿ ಕಾಣಿಸಿಕೊಂಡು ನೂರಾರು ಜೋಳದ ಚೀಲಗಳು ಸುಟ್ಟು ಕರಕಲಾಗಿವೆ.
ಶುಕ್ರವಾರ ರಾತ್ರಿ ಸಂಭವಿಸಿದ ಈ ಅಪಘಾತದಲ್ಲಿ, ಕಿತ್ತೂರು ಮಾರ್ಗವಾಗಿ ಬೆಳಗಾವಿ ಕಡೆಗೆ ಬರುತ್ತಿದ್ದ ಹಾಲಿನ ಟ್ಯಾಂಕರ್ ವೇಗವಾಗಿ ಬಂದು ಜೋಳದ ಚೀಲಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ನಂತರ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ 500ಕ್ಕೂ ಹೆಚ್ಚು ಗೋವಿನ ಜೋಳದ ಚೀಲಗಳು ಸುಟ್ಟು ಭಸ್ಮವಾಗಿವೆ. ಘಟನೆಯ ವೇಳೆ ಇಬ್ಬರು ವಾಹನಗಳ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

