ಬೆಳ್ತಂಗಡಿ : ತಾಲೂಕಿನ ಕುತ್ಲೂರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರಡ್ಡಿ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳು, ಮಕ್ಕಳ ಸುರಕ್ಷತೆ ಹಾಗೂ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಉತ್ತಮವಾಗಿ ಕಲಿತು, ಸಮಾಜಕ್ಕೆ ಕೊಡುಗೆ ನೀಡುವ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಂವಾದದ ವೇಳೆ ವಿದ್ಯಾರ್ಥಿನಿಯೊಬ್ಬರು “ಪೊಲೀಸ್ ಆಗಬೇಕಾದರೆ ಏನು ಮಾಡಬೇಕು?” ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಎಸ್ಪಿ, ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡುವಂತೆ ಆಹ್ವಾನವನ್ನೂ ನೀಡಿದರು. ಶಾಲೆಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ವಿವಿಧ ಚಟುವಟಿಕೆಗಳನ್ನು ವೀಕ್ಷಿಸಿದ ಅವರು, ವಿದ್ಯಾರ್ಥಿಗಳ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಶಾಲಾ ಆವರಣದಲ್ಲಿ ನಿರ್ಮಿಸಲಾಗಿರುವ ಫ್ರೂಟ್ಸ್ ಪಾರ್ಕ್ನಲ್ಲಿ ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕ ವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಸದಸ್ಯ ಸಂತೋಷ್, ಮುಖ್ಯ ಶಿಕ್ಷಕಿ ಫ್ಲೆವಿಯಾ ಡಿ ಸೋಜಾ, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

