ನವದೆಹಲಿ : ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ NEET-UG 2026 ಪರೀಕ್ಷಾ ಅಕ್ರಮ ವಿವಾದದ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ನೈತಿಕ ಹೊಣೆಗಾರಿಕೆಯನ್ನು ಉಲ್ಲೇಖಿಸಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಎರಡು ಪುಟಗಳ ರಾಜೀನಾಮೆ ಪತ್ರವನ್ನು ಹಂಚಿಕೊಂಡಿರುವ ಅವರು, “ಮೇ 3, 2026ರಂದು ನಡೆದ NEET-UG ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ನಾನು ಹೊತ್ತಿದ್ದೇನೆ. ಯಾವುದೇ ಹಂತದಲ್ಲೂ ಪರಿಸ್ಥಿತಿಯಿಂದ ಹಿಂದೆ ಸರಿಯುವ ಪ್ರಯತ್ನ ಮಾಡಿಲ್ಲ” ಎಂದು ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮ ಬೆಳಕಿಗೆ ಬಂದ ತಕ್ಷಣವೇ ಪ್ರಕರಣವನ್ನು ಸಿಬಿಐಗೆ ವಹಿಸಿ, ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳಿಗೆ ಅವಕಾಶ ನೀಡದಂತೆ 2027ರಿಂದ NEET ಪರೀಕ್ಷೆಯನ್ನು ಸಂಪೂರ್ಣ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ
ದೇಶದ ವಿದ್ಯಾರ್ಥಿಗಳ ಹಿತಾಸಕ್ತಿಯೇ ತಮ್ಮ ಮೊದಲ ಆದ್ಯತೆಯಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಹಾಗೂ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿರುವ ಅವರು, ಮುಂದೆಯೂ ದೇಶಸೇವೆಗೆ ಬದ್ಧನಾಗಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.


