ಮಂಗಳೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಳಿಕ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ವೈಫಲ್ಯ ಹಾಗೂ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ನಾಯಕರೇ ಬಹಿರಂಗವಾಗಿ ಮಾತನಾಡುತ್ತಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಬಳಿಕ ಯೋಜನೆಗಳ ಅನುಷ್ಠಾನದಲ್ಲಿ ಹಲವು ಲೋಪ, ಅವ್ಯವಹಾರ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ಟೀಕಿಸಿದರು.
ಗೃಹಲಕ್ಷ್ಮಿ ಯೋಜನೆ ಜಾರಿಗಾಗಿ ರಚಿಸಲಾದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನ ಸಮಿತಿಗಳಲ್ಲಿ ಸರ್ಕಾರಿ ಅಧಿಕಾರಿಗಳ ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರನ್ನೇ ನೇಮಕ ಮಾಡಲಾಗಿದ್ದು, ಅವರಿಗೆ ಗೌರವಧನ ನೀಡುವ ಮೂಲಕ ಸರ್ಕಾರಿ ಯೋಜನೆಯನ್ನು ಪಕ್ಷದ ಸಂಘಟನೆ ಬಲಪಡಿಸಲು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಮಹಿಳೆಯರಿಗೆ ತಲುಪಬೇಕಿದ್ದ ಯೋಜನೆಯ ಲಾಭದ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರಿಗೂ ಲಕ್ಷಾಂತರ ರೂಪಾಯಿ ಗೌರವಧನ ನೀಡಲಾಗಿದೆ. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿನ ಲೋಪಗಳು, ಮೃತಪಟ್ಟವರ ಹೆಸರಿನಲ್ಲಿಯೂ ಹಣ ಜಮೆಯಾಗಿರುವ ಪ್ರಕರಣಗಳು ಸೇರಿದಂತೆ ಹಲವು ಅಕ್ರಮಗಳಿಗೆ ಅನುಷ್ಠಾನ ಸಮಿತಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ದೂರಿದರು.
ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸುವುದಿಲ್ಲ. ಆದರೆ ಅವುಗಳನ್ನು ಪಾರದರ್ಶಕವಾಗಿ ಹಾಗೂ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಆರಂಭದಿಂದಲೂ ಆಗ್ರಹಿಸುತ್ತಿದ್ದು, ವಿಧಾನಮಂಡಲ ಅಧಿವೇಶನದಲ್ಲಿಯೂ ಬಾಕಿ ಹಣ ಬಿಡುಗಡೆ ಹಾಗೂ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಬಿಜೆಪಿ ಶಾಸಕರು ಪ್ರಶ್ನೆ ಎತ್ತಿದ್ದಾರೆ ಎಂದು ಸತೀಶ್ ಕುಂಪಲ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ತಿಲಕ್ ರಾಜ್, ಗುರುಚರಣ್, ಕದ್ರಿ ಮನೋಹರ್, ಪೂಜಾ ಪೈ ಹಾಗೂ ಪೂರ್ಣಿಮಾ ಉಪಸ್ಥಿತರಿದ್ದರು.


