ಮಂಗಳೂರು : ಭಾರೀ ಮಳೆಯ ಅಬ್ಬರಕ್ಕೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿ ಪ್ರದೇಶದಲ್ಲಿ ಇಂದು ಮುಂಜಾನೆ ಭೂಕುಸಿತ ಸಂಭವಿಸಿ, ವಾಸದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ದುರಂತ ನಡೆದಿದೆ. ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಬಾಲಕಿಯರು ಸೇರಿ ಒಟ್ಟು ಮೂವರು ಮೃತಪಟ್ಟಿದ್ದಾರೆ.

ಮನೆ ಕುಸಿದ ವೇಳೆ ಒಳಗಿದ್ದ ಆರು ಮಂದಿ ಮಣ್ಣಿನಡಿ ಸಿಲುಕಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ಮೃತರನ್ನು 46 ವರ್ಷದ ಶಾಂತ, ಅವರ 8 ವರ್ಷದ ಪುತ್ರಿ ಅನಾಮಿಕಾ ಚೌರಾಸಿಯಾ ಹಾಗೂ 4 ವರ್ಷದ ಪುತ್ರಿ ಪರಿ ಎಂದು ಗುರುತಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ 14 ವರ್ಷದ ಅಲ್ಕಾ, 11 ವರ್ಷದ ಅನುಷಾ ಹಾಗೂ 48 ವರ್ಷದ ಬಾಲಕೃಷ್ಣ ಅವರನ್ನು ಜೀವಂತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲತಃ ಬಿಹಾರ ರಾಜ್ಯದವರಾದ ಬಾಲಕೃಷ್ಣ ಅವರ ಕುಟುಂಬ ಕಳೆದ 20 ವರ್ಷಗಳಿಂದ ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಪ್ರದೇಶದಲ್ಲಿ ವಾಸವಾಗಿತ್ತು. ಭಾರೀ ಮಳೆಯ ಪರಿಣಾಮ ಮನೆಯ ಮೇಲ್ಭಾಗದಿಂದ ಮಣ್ಣು ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.
ಕಾರ್ಯಾಚರಣೆಯಲ್ಲಿ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಜೀವಂತವಾಗಿ ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎನ್‌ಡಿಆರ್‌ಎಫ್ ತಂಡವೂ ಸ್ಥಳಕ್ಕೆ ಆಗಮಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿತು. ಅವಶೇಷಗಳಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಹೊರತೆಗೆದು ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಿರಂತರ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಭೀತಿ ಮುಂದುವರಿದಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಈ ದುರಂತ ಮಂಗಳೂರು ನಗರವನ್ನು ತೀವ್ರ ಶೋಕಕ್ಕೆ ದೂಡಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.



