ಮಂಗಳೂರು : ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರೆಂದು ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರನ್ನು ಬಂಧಿಸಲಾಗಿದೆ.
ಆರೋಪಿಗಳು ಉಳ್ಳಾಲದ ಅಬ್ಬಾಸ್ (61) ಹಾಗೂ ಕುತ್ತಾರು ನಿವಾಸಿ ಯಶವಂತ್ ಕುಮಾರ್(45) ಎಂದು ತಿಳಿದುಬಂದಿದೆ. ಆರೋಪಿಗಳಿಂದ ಪಿಸ್ತೂಲ್-1, ಮೊಬೈಲ್ ಫೋನುಗಳು-2, ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಯ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.
ಈ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.