ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರು 15 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಆರೋಪಿಗಳು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡಲು ಮುಂದಾಗಿದ್ದರು ಎಂದು ಮಂಗಳೂರು ಸಿಸಿಬಿ ಪೊಲೀಸರಿಗೆ ತಿಳಿದುಬಂದಿದೆ. ಮಂಗಳೂರು ನಗರದ ತಲಪಾಡಿಯ ಕೆಸಿ ರಸ್ತೆ ಬಳಿ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ್ದಾರೆ.
ಆರೋಪಿಗಳಾದ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಡಾಜೆ ಪೋಸ್ಟ್‌ನ ಪುಚಿತ್ ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಅಲಿಯಾಸ್ ಸಲಾಂ (30) ಮತ್ತು ಸೂರಜ್ ರೈ ಅಲಿಯಾಸ್ ಅಂಕಿ (26) ಬಂಧಿತ ಆರೋಪಿಗಳು. 75 ಸಾವಿರ ಮೌಲ್ಯದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕದ ಮಾಪಕ ಮತ್ತು ಡಿಯೋ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 1,65,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಅಬ್ದುಲ್ ಸಲಾಂ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಈ ಹಿಂದೆ ಪ್ರಕರಣ ದಾಖಲಾಗಿದ್ದು, ಸೂರಜ್ ರೈ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ಕೇರಳದಿಂದ ಎಂಡಿಎಂಎ ಖರೀದಿಸಿ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಅಕ್ರಮ ಲಾಭ ಪಡೆಯುತ್ತಿದ್ದರು ಎನ್ನಲಾಗಿದೆ. ಈ ಮಾದಕ ವಸ್ತು ಕಳ್ಳಸಾಗಣೆ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಪತ್ತೆ ಹಚ್ಚಿ ಬಂಧಿಸುವ ಪ್ರಯತ್ನ ಮುಂದುವರಿದಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದಲ್ಲಿ ಎಂಡಿಎಂಎ ಕಳ್ಳಸಾಗಣೆ ಮತ್ತು ಮಾರಾಟವನ್ನು ಭೇದಿಸುವ ಕಾರ್ಯಾಚರಣೆಯು ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐಗಳಾದ ನರೇಂದ್ರ ಮತ್ತು ಇತರ ಸಿಸಿಬಿ ಸಿಬ್ಬಂದಿಗಳ ಕಾರ್ಯಾಚರಣೆಯಲ್ಲಿದ್ದರು .