ಮೈಸೂರು : ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ 60ಕ್ಕೂ ಹೆಚ್ಚು ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು–ಚಾಮರಾಜನಗರ ಮುಖ್ಯರಸ್ತೆಯಲ್ಲಿ ನಡೆದಿದೆ.
ದೊಡ್ಡಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ನೇತೃತ್ವದಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ, ಎರಡು ಈಚರ್ ಕ್ಯಾಂಟರ್ಗಳಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
KA-01-AG-4796 ಹಾಗೂ KA-16-B-5714 ನೋಂದಣಿ ಸಂಖ್ಯೆಯ ಕ್ಯಾಂಟರ್ಗಳನ್ನು ತಡೆದ ವೇಳೆ, ಪೊಲೀಸರನ್ನು ಕಂಡ ಚಾಲಕರು ವಾಹನಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಪ್ರಕರಣ ಸಂಬಂಧ ಮೈಸೂರಿನ ಸಯ್ಯದ್ ಜಾವೀದ್ (43) ಎಂಬ ಕ್ಲೀನರ್ನನ್ನು ಪೊಲೀಸರು ಬಂಧಿಸಿದ್ದು, ಪರಾರಿಯಾದ ಇಬ್ಬರು ಚಾಲಕರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.
ರಕ್ಷಿಸಲಾದ 60ಕ್ಕೂ ಹೆಚ್ಚು ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


