ಮೈಸೂರು : ಆಷಾಢ ಮಾಸದ ಎರಡನೇ ಶುಕ್ರವಾರದ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆಯಿಂದಲೇ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿ ದರ್ಶನಕ್ಕಾಗಿ ಆಗಮಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಮಹಾಲಕ್ಷ್ಮಿ ಅಲಂಕಾರದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.



ಎರಡನೇ ಆಷಾಢ ಶುಕ್ರವಾರದ ಪ್ರಯುಕ್ತ ತಾಯಿ ಚಾಮುಂಡೇಶ್ವರಿಗೆ ಎರಡನೇ ವಾರವೂ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ತಿಳಿ ಗುಲಾಬಿ ಬಣ್ಣದ ಸೀರೆಯಲ್ಲಿ ದೇವಿ ಕಂಗೊಳಿಸಿದರು. ದೇವಾಲಯದ ಒಳಾಂಗಣ, ಆವರಣ ಹಾಗೂ ಹೊರಾಂಗಣವನ್ನು ಬಣ್ಣಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು. ಭಕ್ತರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಜಿಲ್ಲಾಡಳಿತದಿಂದ ಸಾರಿಗೆ, ಕುಡಿಯುವ ನೀರು, ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿತ್ತು.
ಆಷಾಢ ಮಾಸದ ವಿಶೇಷ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ದಿನವಿಡೀ ಭಕ್ತಿಭಾವ ಹಾಗೂ ಧಾರ್ಮಿಕ ಸಂಭ್ರಮ ಮನೆಮಾಡಿತ್ತು.


