ರಾಯಚೂರು : ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಬಿಎಸ್ವೈ ಹಾಗೂ ವಿಜಯೇಂದ್ರ ಅವರು ರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ದರ್ಶನದ ಬಳಿಕ ಮಠದ ವತಿಯಿಂದ ಇಬ್ಬರಿಗೂ ಶೇಷವಸ್ತ್ರ ಹಾಗೂ ಮಂತ್ರಾಕ್ಷತೆ ನೀಡಿ ಗೌರವಿಸಲಾಯಿತು.
ಮಠದ ಪೀಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಅವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಿಧ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಸುಮಾರು 175 ಕಿ.ಮೀ. ದೂರದ ಈ ಪಾದಯಾತ್ರೆ ಹಲವು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಲಿದೆ.
ಪಾದಯಾತ್ರೆ ಆರಂಭಕ್ಕೂ ಮುನ್ನ ರಾಯರ ದರ್ಶನ ಪಡೆದು ಬಿಜೆಪಿ ನಾಯಕರು ಧಾರ್ಮಿಕ ಆಶೀರ್ವಾದ ಪಡೆದಿರುವುದು ಗಮನ ಸೆಳೆದಿದೆ. ಇದೇ ವೇಳೆ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವೂ ನಡೆಯುತ್ತಿದ್ದು, ಸೆಪ್ಟೆಂಬರ್ 2ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

